ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರಲಿದ್ದಾರೆ?. ಹೌದು, ಇಂತಹ ಒಂದು ಸುದ್ದಿ ಜೆಡಿಎಸ್ ಪಾಳಯದಲ್ಲಿ ಹರಿದಾಡುತ್ತಿದೆ. ಕಳೆದ ವಾರ ಸಿ.ಎಂ.ಇಬ್ರಾಹಿಂ ಅವರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾದ ಸಿ.ಎಂ.ಇಬ್ರಾಹಿಂ ಆಗಸ್ಟ್ 24ರಂದು ವಿಧಾನಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಷತ್ ಸದಸ್ಯರಾಗಿದ್ದ ವಿಮಲಾ ಗೌಡ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಬೇಕಿತ್ತು.ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಎಂ.ಇಬ್ರಾಹಿಂ ನಾಮಪತ್ರ ಸಲ್ಲಿಸಿದ್ದರು. ವಿಧಾನಸಭೆಯಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯಬೇಕಿದ್ದ ಚುನಾವಣೆಗೆ ಬೇರೆ ಯಾವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರಲಿಲ್ಲ. ಆದ್ದರಿಂದ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.2014ರಲ್ಲಿ ಸಿ.ಎಂ.ಇಬ್ರಾಹಿಂ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. 'ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ವದಂತಿ. ಕಾಂಗ್ರೆಸ್ ಪಕ್ಷ ಬಿಡುವ ಯಾವುದೇ ಆಲೋಚನೆ ನನಗಿಲ್ಲ. ಈ ಬಗ್ಗೆ ಗೊಂದಲ ಬೇಡ' ಎಂದು ಸಿ.ಎಂ.ಇಬ್ರಾಹಿಂ ಸ್ಪಷ್ಟನೆ ನೀಡಿದ್ದರು.